ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಕುಂದಾಪುರ ಮಂಡಲ ಹಾಗೂ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ತಿರಂಗಾ ಯಾತ್ರೆಯಲ್ಲಿ 150 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜದೊಂದಿಗೆ ಭವ್ಯ ಪಥಸಂಚಲನ ನಡೆಯಿತು.
ಕುಂದಾಪುರ ಶಾಸ್ತ್ರಿ ವೃತ್ತದಿಂದ ಆರಂಭವಾದ ಪಥಸಂಚಲನ ಪ್ರಮುಖ ಪೇಟೆ ಹಾಗೂ ರಸ್ತೆಗಳ ಮೂಲಕ ಸಾಗಿತು. ನೂರಾರು ಕಾರ್ಯಕರ್ತರು ಹಾಗೂ ಯುವಕರು ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ಸಾಗಿದರು.
ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದ ಕಾರ್ಯಕರ್ತರು ದೇಶಭಕ್ತಿ ಘೋಷಣೆಗಳನ್ನು ಮೊಳಗಿಸಿದರು. ಪಥಸಂಚಲನ ಸಾಗಿದ ಮಾರ್ಗದುದ್ದಕ್ಕೂ ಸಾರ್ವಜನಿಕರು ವೀಕ್ಷಿಸಿದರು.150 ಮೀಟರ್ ಉದ್ದದ ರಾಷ್ಟ್ರಧ್ವಜ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು. ಯುವಜನರಲ್ಲಿ ದೇಶಾಭಿಮಾನ ಹಾಗೂ ರಾಷ್ಟ್ರಪ್ರೇಮದ ಸಂದೇಶ ಸಾರುವ ಉದ್ದೇಶದಿಂದ ಯಾತ್ರೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್, ‘ಯುವಜನತೆ ದೇಶದ ಭವಿಷ್ಯವಾಗಿದ್ದು, ರಾಷ್ಟ್ರದ ಏಕತೆ, ಅಖಂಡತೆ ಹಾಗೂ ಸಾರ್ವಭೌಮತೆಯನ್ನು ಕಾಪಾಡುವ ಜವಾಬ್ದಾರಿ ಯುವಜನರ ಮೇಲಿದೆ’ ಎಂದರು.
ದೇಶಕ್ಕಾಗಿ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಷ್ಟ್ರಧ್ವಜದ ಗೌರವ ಹಾಗೂ ದೇಶಾಭಿಮಾನ ಪ್ರತಿಯೊಬ್ಬರಲ್ಲೂ ಸದಾ ಜಾಗೃತವಾಗಿರಬೇಕು ಎಂದು ಅವರು ಹೇಳಿದರು.
ಶಾಸಕ ಕಿರಣ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಯುವಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ, ವಿಜಯ ಕೊಡವೂರು, ಶ್ರೀಕಾಂತ್ ನಾಯಕ್, ಕಾಡೂರು ಸುರೇಶ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
150 ಮೀಟರ್ ರಾಷ್ಟ್ರಧ್ವಜದೊಂದಿಗೆ ನಡೆದ ಪಥಸಂಚಲನ ಕುಂದಾಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಮೆರುಗು ನೀಡಿತು.















