ಉಡುಪಿ: ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಉಡುಪಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಅವರು ಸಂದೇಶವನ್ನು ನೀಡಿದರು.
ರಾಜ್ಯದಲ್ಲಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಯನ್ನು ಆದಷ್ಟು ಕಡಿಮೆ ಮಾಡಿ ಪರಿಸರ ಸ್ನೇಹಿಯಾದ ಸೌರಶಕ್ತಿ ಮತ್ತು ವಿಂಡ್ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲು ಚಿಂತನೆ ನಡೆಸಲಾಗಿದೆ. ಆ ಮೂಲಕ ಗ್ರಾಹಕರು, ರೈತರು ಹಾಗೂ ಉದ್ಯಮಿ ಸ್ನೇಹಿ ನೀತಿ ಜಾರಿಗೊಳಿಸಲಾಗುವುದು ಎಂದರು.
ರಾಜ್ಯದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡುವ ಉದ್ದೇಶ ಹೊಂದಲಾಗಿದ್ದು, ಶೀಘ್ರವೇ ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.
ಕನ್ನಡ-ಸಂಸ್ಕೃತಿ ಇಲಾಖೆಗೆ ಪ್ರತ್ಯೇಕ ನೀತಿ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಇದುವರೆಗೂ ಪ್ರತ್ಯೇಕ ನೀತಿ ಇರಲಿಲ್ಲ. ಈ ಸಂಬಂಧ ಹಿರಿಯರ ರಚಿಸಿ ವರದಿ ಪಡೆದು ಶೀಘ್ರ ಪ್ರತ್ಯೇಕ ನೀತಿ ರಚನೆ ಮಾಡಲಾಗುವುದು. ಸಮಿತಿಯ ವರದಿಯಂತೆ ಮುಂದೆ ಕನ್ನಡ ಮತ್ತು ಸಂಸ್ಕೃತಿಗೆ ಸಂಬಂಧಪಟ್ಟ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಯಕ್ಷಗಾನಕ್ಕೆ ಒತ್ತು, ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೆ ಯತ್ನ, ದಕ್ಷಿಣ ಕನ್ನಡ ಜಿಲ್ಲೆಯ ಉಬ್ಬರಡ್ಕ ಹಾಗೂ ಮಿತ್ತೂರು ಗ್ರಾಮಗಳನ್ನು ಪಾರಂಪರಿಕ ಗ್ರಾಮಗಳನ್ನಾಗಿ ಮಾಡುವುದು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ತೆಗೆದುಕೊಳ್ಳುವುದರ ಜತೆಗೆ ಭಾಷೆ ಮತ್ತು ಸಂಸ್ಕೃತಿಯನ್ನು ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು ಎಂದರು.
250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯ ಕಟ್ಟಡ ನಿರ್ಮಾಣ ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದು. ಪಶ್ಚಿಮ ವಾಹಿನಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳ ನಿರ್ಮಾಣ, ಕಾರ್ಕಳ ಉಡುಪಿ ನಗರಕ್ಕೆ ಯುಜಿಡಿ ವ್ಯವಸ್ಥೆ, ವಾರಾಹಿ ನದಿಯಿಂದ ಜಿಲ್ಲೆಯ ಐದು ತಾಲ್ಲೂಕುಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಎಸ್ಪಿ ನಿಖಿಲ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.