ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಬಳಿಕ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ“ ಹೆಸರಿನಲ್ಲಿ ವಿಶೇಷ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿತ್ತು.
ಪರಿಶೀಲನೆ ವೇಳೆ ಹಲವು ಅಕ್ರಮಗಳು ಬೆಳಕಿಗೆ ಬಂದಿದ್ದು, ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರ ಕುಟುಂಬಗಳು, ಮೃತ ಫಲಾನುಭವಿಗಳ ಹೆಸರಿನಲ್ಲಿ ಹಣ ಜಮೆಯಾಗುತ್ತಿರುವುದು ಹಾಗೂ ಒಂದೇ ಕುಟುಂಬದಿಂದ ಒಂದಕ್ಕಿಂತ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.
ಮೃತರ ಖಾತೆಗೂ ಜಮೆಯಾಗಿದ್ದ ಹಣ
ಯೋಜನೆಯ ಹಣ ದುರ್ಬಳಕೆಯಾಗುತ್ತಿರುವುದು ಹಾಗೂ ಮೃತಪಟ್ಟವರ ಖಾತೆಗಳಿಗೂ ಹಣ ಜಮೆಯಾಗುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಯ ಪರಿಷ್ಕರಣೆ ಕಾರ್ಯ ಕೈಗೊಂಡಿತ್ತು. ಈ ಸಂಬಂಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಮಾಹಿತಿ ಸಂಗ್ರಹಿಸಲಾಗಿತ್ತು.
ಪ್ರಸ್ತುತ ಯೋಜನೆಯಲ್ಲಿ 1.20 ಕೋಟಿಗೂ ಅಧಿಕ ಮಹಿಳೆಯರು ಫಲಾನುಭವಿಗಳಾಗಿದ್ದು, ಪರಿಶೀಲನೆಯ ನಂತರ ಮೃತಪಟ್ಟವರು ಹಾಗೂ ಅನರ್ಹರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಒಟ್ಟು 4.30 ಲಕ್ಷ ಹೆಸರುಗಳನ್ನು ಅಳಿಸಿ, ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 12 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಒಟ್ಟು 2,08,030 ಮಹಿಳೆಯರು ಯೋಜನೆಗೆ ನೋಂದಾಯಿಸಿಕೊಂಡಿದ್ದರು. ಪರಿಶೀಲನೆಯ ವೇಳೆ 6,624 ಮೃತ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವುದು ಹಾಗೂ 4,800 ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿದಾರರು ಯೋಜನೆಯ ಲಾಭ ಪಡೆಯುತ್ತಿರುವುದು ಪತ್ತೆಯಾಗಿದೆ. ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ 12,719 ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಪರಿಶೀಲನೆ ಮುಂದುವರಿಕೆ
ವಿವಿಧ ಇಲಾಖೆಗಳ ಡೇಟಾಬೇಸ್‌ಗಳನ್ನು ಪರಸ್ಪರ ಜೋಡಿಸಿ ಮಾಹಿತಿಯನ್ನು ಪರಿಶೀಲಿಸುವ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ತಪಾಸಣೆ ಮುಂದುವರಿಯಲಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸುವ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ವೇಳೆ, ಅರ್ಹರಾಗಿದ್ದರೂ ತಾಂತ್ರಿಕ ಕಾರಣಗಳಿಂದ ಹೆಸರು ಕೈಬಿಟ್ಟಿರುವ ಮಹಿಳೆಯರು ಸಂಬಂಧಿತ ಇಲಾಖೆಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದ ಅತಿದೊಡ್ಡ ನೇರ ನಗದು ವರ್ಗಾವಣೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಪಾರದರ್ಶಕತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಈ ಶುದ್ಧೀಕರಣ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.















