ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ

ಗಾಂಧಿನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ವಿಜಯ್ ರೂಪಾನಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.

ನಿನ್ನೆ ರಾತ್ರಿ ಕೇಂದ್ರ ಗೃಹ  ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ.

ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ ತಕ್ಕಂತೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಸಂಸ್ಕೃತಿ ಇದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ.