ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿಗಳ ಬಸ್ ಪಲ್ಟಿ: ಮೂವರು ವಿದ್ಯಾರ್ಥಿಗಳು, ಶಿಕ್ಷಕಿಗೆ ಗಾಯ

ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ.

ತ್ರಿಶೂರ್ ಜಿಲ್ಲೆಯ ಶ್ರೀಕೃಷ್ಣ ಕಾಲೇಜು ವಿದ್ಯಾರ್ಥಿಗಳಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, 7 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದರೆ  ಶಿಕ್ಷಕಿ ಡಾ.ರಶ್ಮಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೂಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.