ಬಿಸ್ಲೆರಿ ಕಂಪೆನಿಯ ಬಾಟಲಿ ನೀರಿನಲ್ಲಿ ಹಾನಿಕಾರಕ ಅಂಶ ಪತ್ತೆ: ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ FSSAI

ನವದೆಹಲಿ: ಜನಪ್ರಿಯ ಪ್ಯಾಕೇಜ್ಡ್ ಕುಡಿಯುವ ನೀರಿನ ಬ್ರ್ಯಾಂಡ್ ಬಿಸ್ಲೆರಿ (Bisleri) ವಿರುದ್ಧ ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕಾನೂನು ಕ್ರಮಕ್ಕೆ ಅನುಮತಿ ನೀಡಿದೆ. ಬಿಸ್ಲೆರಿ ನೀರಿನ ಮಾದರಿಗಳ ಪ್ರಯೋಗಾಲಯ ಪರೀಕ್ಷೆಯಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ನೀರನ್ನು ಅಸುರಕ್ಷಿತ ಎಂದು ವರದಿ ಮಾಡಲಾಗಿದೆ.

ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಎಫ್‌ಎಸ್‌ಎಸ್‌ಎಐ ಅನುಮತಿ ನೀಡಿದೆ. ಕಂಪನಿಯ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ನೀರಿನಲ್ಲಿ ಬ್ರೋಮೇಟ್ ಪ್ರಮಾಣ ನಿಗದಿತ ಮಿತಿಗಿಂತ ಹೆಚ್ಚಿರುವುದು ಪತ್ತೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ನೀರನ್ನು ಅಸುರಕ್ಷಿತ ಎಂದು ಘೋಷಿಸಲಾಗಿದೆ. ಅಲ್ಲದೆ, ರೆಫರಲ್ ಫುಡ್ ಲ್ಯಾಬ್‌ನಲ್ಲಿಯೂ ಮತ್ತೊಮ್ಮೆ ಪರೀಕ್ಷೆ ನಡೆಸಲಾಗಿದ್ದು, ನೀರಿನಲ್ಲಿ ಪಾಲಿನ್ಯೂಕ್ಲಿಯರ್ ಅರೋಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು ಪತ್ತೆಯಾಗಿವೆ ಎನ್ನಲಾಗಿದೆ.

ಎರಡನೇ ಪ್ರಯೋಗಾಲಯದ ಪರೀಕ್ಷೆಯಲ್ಲೂ ನೀರು ಅಸುರಕ್ಷಿತ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಸ್ಲೆರಿ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಫ್‌ಎಸ್‌ಎಸ್‌ಎಐ ಮುಂದಾಗಿದೆ.