ಉಡುಪಿ ಸೆಪ್ಟೆಂಬರ್, 22: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದರು.
ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಜನಪರ ಕಲ್ಯಾಣ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ, ಇವುಗಳ ಬಗ್ಗೆ ಅವರುಗಳಿಗೆ ಅರಿವು ಮೂಡಿಸುವುದರೊಂದಿಗೆ ಅವರನ್ನು ಫಲಾನುಭವಿಗಳನ್ನಾಗಿಸಬೇಕು ಎಂದರು.
ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮವು ಸರ್ಕಾರ ನಿಗದಿಪಡಿಸಿದಂತೆ ಮಾಡಿಸಬೇಕು. ಅದರ ಜೊತೆಗೆ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಹೆಲ್ತ್ ಚೆಕ್ಆಪ್ ಕಾರ್ಯವು ಉನ್ನತ ಆಸ್ಪತ್ರೆಯ ಸಹಯೋಗದೊಂದಿಗೆ ಚಿಕಿತ್ಸೆ ನೀಡಬೇಕೆಂದರು.
ಸ್ಥಳೀಯ ಸಂಸ್ಥೆ ವ್ಯಾಪ್ತಿ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸಕ್ಕಿಂಗ್ ಯಂತ್ರ ಖರೀದಿಸಲು ಸಫಾಯಿ ಕರ್ಮಚಾರಿಗಳಿಗೆ ಬ್ಯಾಂಕಿನಿಂದ ಸಾಲ-ಸೌಲಭ್ಯ ಒದಗಿಸಬೇಕು ಎಂದ ಅವರು ಇದಕ್ಕೆ ಪೂರಕವಾಗಿ ಬ್ಯಾಂಕುಗಳು ರಿಯಾಯಿತಿ ದರದಲ್ಲಿ ಸಾಲ ನೀಡುವ ವ್ಯವಸ್ಥೆಯನ್ನು ಲೀಡ್ ಬ್ಯಾಂಕ್ನವರು ಕ್ರಮವಹಿಸಬೇಕೆಂದರು.
ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಫಲಾನುಭವಿಗಳನ್ನಾಗಿಸಿ ಅವರುಗಳಿಗೆ ನಿವೇಶನ ನೀಡುವುದರ ಜೊತೆಗೆ ಗೃಹ ನಿರ್ಮಾಣ ಮಾಡಿಕೊಡಬೇಕೆಂದು ತಿಳಿಸಿದ ಅವರು ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತ್ನಿಂದ ನಿವೇಶನಗಳನ್ನು ಹಂಚಿಕೆ ಮಾಡುವಾಗ ಪೌರ ಕಾರ್ಮಿಕರಿಗೆ ಪ್ರಥಮ ಆದ್ಯತೆಯಲ್ಲಿ ನಿವೇಶನ ನೀಡಬೇಕೆಂದು ತಿಳಿಸಿದರು.
ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪೌರ ಕಾರ್ಮಿಕರಿಗೆ ದೊರೆಯುವ ವಿವಿಧ ಸಾಲ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರುಗಳನ್ನು ಫಲಾನುಭವಿಗಳಾನ್ನಾಗಿಸಬೇಕು ಎಂದರು.
ಗ್ರಾಮ ಪಂಚಾಯತ್ಗಳಲ್ಲಿ ಪೌರ ಕಾರ್ಮಿಕರಾಗಿ ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸುವವರಿಗೆ ಶಾಶ್ವತ ಉದ್ಯೋಗ ಒದಗಿಸಿ ಕೊಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೆಕರ್, ಎ.ಎಸ್.ಪಿ ಕುಮಾರ್ಚಂದ್ರ, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.