ಆಭಾ ಕಾರ್ಡ್ ಹೊಂದಿರುವವರಿಗೆ ಗ್ರಾಮ ಒನ್ ಕೇಂದ್ರಗಳಲ್ಲಿ ಆರೋಗ್ಯ ಸೇವೆಗಳು ಲಭ್ಯ

ಉಡುಪಿ: ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಯಡಿ ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ, ಒಬ್ಬ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲು ಎ.ಬಿ.ಹೆಚ್.ಎ (ABHA) ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದ್ದು, ಈ ಕಾರ್ಡ್ ಹೊಂದಿದ ಫಲಾನುಭವಿಗಳು ಸರ್ಕಾರಿ ಹಾಗೂ ಖಾಸಗೀ ಆಸ್ಪತ್ರೆಯಲ್ಲಿ 5 ಲಕ್ಷ ರೂ. ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಹಾಗೂ ಚಿಕಿತ್ಸೆಯ ಮಾಹಿತಿಯೂ ಕೂಡ ದೇಶದ ಯಾವುದೇ ಭಾಗದಲ್ಲಿ ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ.

ಕಾರ್ಡಿನ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.