ಬೆಂಗಳೂರು: ಈಶಾನ್ಯ ಮಾರುತಗಳ ಪ್ರಭಾವ ಹಾಗೂ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಡಲ ತೀರದಲ್ಲಿ ಬಿರುಗಾಳಿ ಬೀಸುವ ಸಂಭವವಿರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.















