ಬೆಂಗಳೂರು: ಕರಾವಳಿ ಜಿಲ್ಲೆಗಳು ಸಹಿತ ರಾಜ್ಯದ ವಿವಿಧೆಡೆ ನ.16ರಿಂದ 18ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸೂಚನೆ ಇದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಇದೇ 18ರವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಸೂಚಿಸಿದೆ.