ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಎರಡು ದಿನ ಭಾರಿ ಮಳೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.