ರಾಜ್ಯದಲ್ಲಿ ಇನ್ನೆರಡು ದಿನವೂ ಭಾರೀ ಮಳೆ ಸಾಧ್ಯತೆ: ಹವಾಮಾನ ವರದಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಗುರುವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ.

ರಾಜ್ಯದ ಮಂಡ್ಯ, ಶಿವಮೊಗ್ಗ, ಚಾಮರಾಜನಗರ, ವಿಜಯನಗರ, ಹುಬ್ಬಳ್ಳಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮದು (34) ಎಂಬುವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮದ್ದೂರು ಪಟ್ಟಣದ ಶಿವಪುರ ನಿವಾಸಿ ಗೌರಮ್ಮ (60) ಎಂಬುವರು ಸಿಡಿಲಿನ ಆರ್ಭಟಕ್ಕೆ ಮನೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಮಸೀದಿ ಬಳಿ ಚಲಿಸುತ್ತಿದ್ದ ರಿಕ್ಷಾ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭೂಕುಸಿತವಾಗುವ ಸಾಧ್ಯತೆ:

ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದಾಗಿ ರಾತ್ರೋರಾತ್ರಿ ಚಂಡಮಾರುತ ತೀವ್ರಗೊಂಡಿದೆ. ಬಾಂಗ್ಲಾದೇಶದ ಕಾಕ್ಸ್ ಬಜಾರ್ ಮತ್ತು ಮ್ಯಾನ್ಮಾರ್‌ನ ಸಿಟ್ವೆ ನಡುವೆ ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಳಗ್ಗೆ ಮೋಚಾ ಚಂಡಮಾರುತವು ಪೋರ್ಟ್ ಬ್ಲೇರ್‌ನಿಂದ ನೈಋತ್ಯಕ್ಕೆ 510 ಕಿಮೀ ದೂರದಲ್ಲಿತ್ತು. ರಾತ್ರಿ ವೇಳೆಗೆ ತೀವ್ರತೆ ಪಡೆದುಕೊಳ್ಳುವ ಸಾಧ್ಯತೆಯಿದೆ. ಮೇ 13ರ ಸಂಜೆ ಗರಿಷ್ಠ ತೀವ್ರತೆಯನ್ನು ತಲುಪುತ್ತದೆ ಇಲಾಖೆ ತಿಳಿಸಿದೆ.

ಮೇ 14ರ ಬೆಳಿಗ್ಗೆಯಿಂದ ಚಂಡಮಾರುತ ಸ್ವಲ್ಪ ದುರ್ಬಲಗೊಳ್ಳುವ ಸಾಧ್ಯತೆಯಿದೆ ಮತ್ತು ಆಗ್ನೇಯ ಬಾಂಗ್ಲಾದೇಶ, ಉತ್ತರ ಮ್ಯಾನ್ಮಾರ್ ಕರಾವಳಿಯಲ್ಲಿ ವೇಗವಾದ ಗಾಳಿ ಬೀಸಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಕರಾವಳಿಯಲ್ಲಿ ಹೈ ಅಲರ್ಟ್‌ ಮಾಡಲಾಗಿದೆ. ಕರಾವಳಿ ಪಡೆ ಚಂಡಮಾರುತವನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಮೀನುಗಾರರಿಗೆ ಎಚ್ಚರಿಕೆಗಳನ್ನು ನೀಡಲಾಗಿದೆ.