ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.
ಈಗಾಗಲೇ ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏಳುತ್ತಿರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ.
ಜು.3ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲೆ ಕೂಡ ಮುಂದಿನ ಐದು ದಿನಗಳವರೆಗೆ ಮಳೆಯಾಗಲಿದೆ ಎಂದು ತಿಳಿಸಿದರು.
ರಾಜ್ಯದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾದ್ಯತೆ ಹೆಚ್ಚಿದ್ದು, ಜು.2ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಹಾಗೂ ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.