ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಜನರಿಗೆ ಹವಾಮಾನ ಇಲಾಖೆ ತುರ್ತು ಎಚ್ಚರಿಕೆ ನೀಡಿದೆ. India Meteorological Department ಬೆಂಗಳೂರು ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದ ಕರಾವಳಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕರಾವಳಿ ಭಾಗಗಳಾದ ಕಾಸರಗೋಡು,ಉಡುಪಿ ಭಾಗಗಳಲ್ಲಿ ಇಂದು ಸಂಜೆ ಹಾಗೂ ರಾತ್ರಿ ವೇಳೆ ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಮುಂಗಾರು ಆಗಮನಕ್ಕೂ ವೇದಿಕೆ ಸಿದ್ಧವಾಗಿದ್ದು, ಜೂನ್ 4ರಂದು ಮುಂಗಾರು ಕೇರಳ ಪ್ರವೇಶಿಸಿ, ಜೂನ್ 5ರಂದು ಕರ್ನಾಟಕ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.















