ಮೇ 26ರಿಂದ 29ರ ವರೆಗೆ ಕರಾವಳಿಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇದೇ 26ರಿಂದ 29ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಇಲಾಖೆಯು ಮೂರೂ ದಿನಗಳವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗಲಿದೆ.
ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸಲಿದೆ. ಅಲ್ಲಿಯವರೆಗೆ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದರು.