ಹೆಬ್ರಿ: ಚಾಲಕ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಬ್ಯಾಣ ಎಂಬಲ್ಲಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರು ಶೃಂಗೇರಿ ಮೂಲದವರು ಎಂದು ತಿಳಿದುಬಂದಿದೆ. ಚಾಲಕ ಸಹಿತ ಐವರು ಎರ್ಟಿಗಾ ಕಾರಿನಲ್ಲಿ ಆಗುಂಬೆ ಘಾಟಿಯಿಂದ ಉಡುಪಿ ಕಡೆಗೆ ಬರುತ್ತಿದ್ದರು. ಹೆಬ್ರಿಯ ಶಿವಪುರದ ಸಮೀಪದ ಬ್ಯಾಣ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಚಾಲಕ ಸಹಿತ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಗಾಯಗೊಂಡವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಬ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.