ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತಾ ಶಾಲೆಗಳ ಸಂಘದ ಸಹಯೋಗದಲ್ಲಿ ಉಡುಪಿ ಜಿಲ್ಲೆಯಲ್ಲಿ 200 ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ (ಆ. 2ರಂದು) ಬೆಳಿಗ್ಗೆ 10:30ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಉಪಾಧ್ಯಕ್ಷ ನಾಗರಾಜ ಶೆಟ್ಟಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್.ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಉಪಕುಲಪತಿ, ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ್ ಎಸ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಇಂದಿರಾ ಹಾಲಂಬಿ ಅವರಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.












