ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ ಅನುಮಾನಾಸ್ಪಸ ಸಾವು ಪ್ರಕರಣ

ಕುಂದಾಪುರ: ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ(55) ಅನುಮಾನಾಸ್ಪಸ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದ್ದು, ಕತ್ತು ಹಿಸುಕಿ ಉಸಿರುಗಟ್ಟಿ ಸಾಯಿಸಲಾಗಿದೆ ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ. ಈ ಮೂಲಕ ಅನುಮಾನಾಸ್ಪದ ಸಾವು ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

ಪತಿ ತೀರಿಕೊಂಡ ಬಳಿಕ ಕಳೆದೆರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಗುಲಾಬಿ ಮಾರ್ಚ್ 1ರ ಬೆಳಿಗ್ಗೆ ಗುಲಾಬಿ ಶವವಾಗಿ ಮನೆಯ ಕೋಣೆಯೊಳಗೆ ಪತೆಯಾಗಿದ್ದರು. ಗುಲಾಬಿ ಧರಿಸಿದ್ದ ಚಿನ್ನಾಭರಣಗಳು ಇಲ್ಲದ ಹಿನ್ನೆಲೆಯಲ್ಲಿ ಸ್ಥಳೀಯರು ಕೊಲೆ ಶಂಕೆ ವ್ಯಕ್ತಪಡಿಸಿದ್ದರು. ಸ್ಥಳಕ್ಕಾಗಮಿಸಿದ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ಮಣಿಪಾಲ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರವಾನಿಸಿದ್ದರು. ಸೋಮವಾರ ರಾತ್ರಿ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಗುಲಾಬಿಯ ಕತ್ತು ಹಿಸುಕಿ ಉಸಿರುಗಟ್ಟಿ ಸಾಯಿಸಲಾಗಿದೆ ಎಂಬ ಮಹತ್ತರವಾದ ಅಂಶ ಬೆಳಕಿಗೆ ಬಂದಿದೆ.

ಸ್ಥಳೀಯರು ಕೊಲೆ ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅಂದಿನಿಂದಲೇ ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ನಾಲ್ಕು ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಬಿ.ಪಿ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಮಂಜಪ್ಪ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ಆರೋಪಿಗಳ ಪತ್ತೆಗಾಗಿ ಬಲೆಬೀಸಿದ್ದಾರೆ.