ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್; ನಿಷೇಧ ಹೇರಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ಗಳನ್ನು ಟ್ಯಾಕ್ಸಿಗಳನ್ನಾಗಿ ಬಳಸಲು ಹೈಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ಹೇರಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ಆದರೆ ಇದೀಗ ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.

ಒಲಾ, ಊಬರ್ ಮತ್ತಿತರ ಅಗ್ರಿಗೇಟರ್ ಗಳು ಸಲ್ಲಿಸಿದ ಮೇಲ್ಮನವಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಮಾನ್ಯ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್ ಗಳು ಸಾರಿಗೆ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಅರ್ಹ ಮನವಿಗಳನ್ನು ಸರ್ಕಾರ ಪುರಸ್ಕರಿಸಿ ಅನುಮತಿ ನೀಡಬೇಕು. ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 74(2) ರ ಪ್ರಕಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಷರತ್ತುಗಳನ್ನು ವಿಧಿಸಬಹುದು ಎಂದು ಪೀಠ ಆದೇಶ ನೀಡಿದೆ. ಇದರಿಂದ ಬೈಕ್ ಟ್ಯಾಕ್ಸಿ ಚಾಲಕರು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಹಾವಳಿ ಹೆಚ್ಚಾಗಿದೆ ಎಂದು ಕೆಲ ಸಂಸ್ಥೆಗಳು ದೂರು ನೀಡಿತ್ತು. ಇತ್ತ ಆಟೋ, ಕ್ಯಾಬ್ ಸೇವೆಗಳು ದುಬಾರಿಯಾಗುತ್ತಿದ್ದಂತೆ ಬೈಕ್ ಟ್ಯಾಕ್ಸಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳ ಪ್ರಯಾಣಿರಿಗೆ ವರವಾಗಿತ್ತು. ಆದರೆ, ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿ ಆದೇಶ ನೀಡಿತ್ತು.

ಇತ್ತ ಈ ಆದೇಶವನ್ನು ಪ್ರಶ್ನಿಸಿ ಬೈಕ್ ಟ್ಯಾಕ್ಸಿ ಅಗ್ರೇಟರ್ ಕಂಪನಿಗಳು ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಏಕಸದಸ್ಯ ಪೀಠ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದಿತ್ತು. ಹೀಗಾಗಿ ಅಗ್ರಿಗೇಟರ್ ಕಂಪನಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಕುರಿತು ವಿಚಾನೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಇಂದು ಮಹತ್ವದ ಆದೇಶ ನೀಡಿದೆ.