ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ; ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು

ಬೆಂಗಳೂರು: ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಮನವಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.

ಹಿಜಾಬ್ ಗೆ  ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಪೀಠ ವಜಾ ಮಾಡಿದೆ.

ಈ ಬಗ್ಗೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಇಂದು ಪ್ರಕಟಿಸಿತು.

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ, ಸರಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಯಾರು ಪ್ರಶ್ನೆ ಮಾಡುವಂತಿಲ್ಲ. ಹಿಜಾಬ್ ಗೆ ಅವಕಾಶ ನೀಡುವುದು ಆಯಾ ಕಾಲೇಜು ಆಡಳಿತ ಮಂಡಳಿಗೆ ಬಿಟ್ಟ ವಿಚಾರ ಎಂದು ಪೀಠ ಹೇಳಿದೆ. ಆ ಮೂಲಕ‌ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗಳನ್ನು ವಜಾಗೊಳಿಸಿದೆ.