ಹೆಚ್.ಐ.ವಿ ರೋಗದ ಶ್ರೀಘ್ರ ತಪಾಸಣೆಯಿಂದ ಚಿಕಿತ್ಸೆ ಸಾಧ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಹೆಚ್.ಐ.ವಿ/ಏಡ್ಸ್ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಸಿ, ಶೀಘ್ರದಲ್ಲಿ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸುವುದರಿಂದ ರೋಗ ಹರಡುವುದನ್ನು ತಡೆಯಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಗುರುವಾರ ನಗರದ ಮಿನಿ ಟೌನ್ ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ ಕಾಲೇಜ್ ಆಫ್ ನರ್ಸಿಂಗ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್‌ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ, ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ
ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪಾಸಿಟಿವಿಟಿ ರೇಟ್ ಕೂಡ ಕಡಿಮೆಯಿದೆ. ಸ್ವಯಂ ಸೇವಾ ಸಂಸ್ಥೆಗಳು, ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಹೆಚ್.ಐ.ವಿ ಏಡ್ಸ್ ಕುರಿತ ಸಂಶಯಗಳು ಮತ್ತು ಊಹಾಪೋಹಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1097 ಮೂಲಕ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಸಂವಿಧಾನ ಪೀಠಿಕೆ ಬೋಧಿಸಿದರು.

ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ವಿದ್ಯಾರತ್ನಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಅನಿತಾ ಸಿ ರಾವ್, ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ್ ಕೆ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಹೆಚ್.ಐ.ವಿ/ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಬೋರ್ಡ್ ಹೈಸ್ಕೂಲ್‌ನಿಂದ ಉಡುಪಿ ಪುರಭವನದವರೆಗೆ ಜಾಥಾ ನಡೆಯಿತು. ಹೆಚ್.ಐ.ವಿ/ಏಡ್ಸ್ ಕುರಿತು ಶ್ರೀ ರೇಣುಕಾಮಾತೆ ತೊಗಲು ಗೊಂಬೆ ಕಲಾತಂಡದಿಂದ ತೊಗಲು ಗೊಂಬೆ ಪ್ರದರ್ಶನ ನಡೆಯಿತು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಸ್ವಾಗತಿಸಿದರು, ಮಂಜುನಾಥ್ ನಿರೂಪಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.