ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದ್ದು, ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
“ಹೊಯ್ಸಳ” ಮತ್ತು “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಸಂಬoಧಿಸಿದoತೆ 2025 ರ ಆಗಸ್ಟ್ 1 ರಿಂದ 2026 ರ ಜುಲೈ 31 ರ ಒಳಗೆ ಪ್ರಕರಣ ನಡೆದಿರಬೇಕು.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/- ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಣೆಗಳಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, 576104 ದೂರವಾಣಿ ಸಂಖ್ಯೆ 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.















