ಕಾರ್ಕಳ : ಇಲ್ಲಿನ ಎಂ. ಪಿ. ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಡಿ.2 ರಂದು ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾತನಾಡಿ,
ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳೊಂದಿಗೆ ಉದ್ಯೋಗ ಜೀವನವನ್ನು ರೂಪಿಸಲು ಅನೇಕ ಅವಕಾಶಗಳಿವೆ. ಮೂರು ವರ್ಷದ ಪದವಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ತಯಾರಿ ನಡೆಸಬೇಕು, ಸತತ ಪರಿಶ್ರಮ ಮತ್ತು ಓದಿನ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲಬಹುದು. ವಿದ್ಯಾರ್ಥಿ ದೆಸೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಪಡೆದು, ಪರೀಕ್ಷೆಗಳಿಗೆ ತಯಾರಿ ನಡೆಸುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬೆಳೆದರೆ ಭವಿಷ್ಯದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬದುಕನ್ನು ಕಟ್ಟಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕಾಲೇಜಿನ ಪ್ರಾಂಶುಪಾಲ ಡಾ.ಕಿರಣ್ ಎಂ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ತಯಾರಿ ಹಾಗೂ ಒಲವನ್ನು ತೋರಬೇಕು ಎಂದರು.
ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸೌಮ್ಯ ಹೆಚ್. ಕೆ ಮಾನವಿಕ ಸಂಘದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನ ಮಾನವಿಕ ಸಂಘ, ವಿದ್ಯಾರ್ಥಿಗಳ ಕ್ರಿಯಾಶೀಲತೆ ಮತ್ತು ಏಳಿಗೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ರೂಪಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸುಷ್ಮಾ ರಾವ್ ಅವರು ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮವನ್ನು ಸುಚಿತ್ರಾ ನಿರೂಪಿಸಿ,ಪ್ರತೀಕ್ಷಾ ಸ್ವಾಗತಿಸಿದರು. ನಿರ್ಮಲಾ ವಂದಿಸಿದರು.