ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಕರಾವಳಿ ಪ್ರದೇಶಗಳು ಮತ್ತು ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಗುಡ್ಡಗಾಡು ಪ್ರದೇಶಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣದ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ವಿಜಯನಗರ, ಮೈಸೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 14, ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಕೆಲವೆಡೆ ಲಘು ಮಳೆಯಾಗಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ನಿರೀಕ್ಷೆಯಿದೆ. ರಾಜ್ಯದ ಕೆಲವೆಡೆ ಏ.14ರವರೆಗೂ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.