ಮಂಗಳೂರು/ಉಡುಪಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 12 ಮತ್ತು 13 ರಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ನವೆಂಬರ್ 14 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ ಮೂರು ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಲಿದ್ದು, ಒಟ್ಟು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಈಶಾನ್ಯ ಮಾರುತಗಳು ಸಕ್ರಿಯವಾಗಿದ್ದು, ನವೆಂಬರ್ 13, 14 ರಂದು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಸೂಚಿಸಿದೆ.