ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕಾ ಬೆಳೆ ಸೇರಿದಂತೆ ಮನೆ ಹಾನಿಯ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಷ್ಟ ಅಂದಾಜಿಸುವುದರೊಂದಿಗೆ ಸರಕಾರದ ಮಾರ್ಗ ಸೂಚಿಯಂತೆ ಬಾಕಿ ಉಳಿದ ನಷ್ಟ ಪರಿಹಾರವನ್ನು ಶೀಘ್ರದಲ್ಲಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈವರೆಗೂ ಮಳೆಯಿಂದ ರಸ್ತೆ , ಸೇತುವೆ, ಕೃಷಿ, ತೋಟಗಾರಿಕೆ ಬೆಳೆ, ಮನೆ ಹಾನಿ ಸೇರಿದಂತೆ ಅಂದಾಜು 334.2 ಕೋಟಿ ರೂ. ಯಷ್ಟು ಹಾನಿ ಉಂಟಾಗಿದೆ.
ಮುಂದಿನ ದಿನಗಳಲ್ಲಿ ಮಳೆಯಿಂದ ಹಾನಿಯಾಗುವ ಸಂಭವ ಇರುವ ಕಡೆಗಳಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರೂ ಸಹ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.