ರಾಜ್ಯದಲ್ಲಿ ಸಂಜೆ 7ರಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ, ಶನಿವಾರ-ಭಾನುವಾರ ಪೂರ್ತಿ ಲಾಕ್ ಡೌನ್ ಮಾಡಿ: ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮಾವಳಿಗಳನ್ನು ಜಾರಿ ಮಾಡುವಂತೆ ತಾಂತ್ರಿಕ ಸಲಹಾ ಸಮಿತಿ (Technical Advisory Committee) ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಮತ್ತೆ ಕಠಿಣ ಕ್ರಮ ಜಾರಿ ಮಾಡುವ ಅನಿವಾರ್ಯವಿದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ಬಸ್​ಗಳ​ ಸಂಚಾರಕ್ಕೆ ಅವಕಾಶ ನೀಡಬೇಕು. ಸಂಜೆ 7 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿ ಮಾಡಬೇಕು. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ತನಕ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಬೇಕು. ಶನಿವಾರ ಭಾನುವಾರ ಎರಡು ದಿನವೂ ಸಾರ್ವಜನಿಕ ಸಂಚಾರ ನಿರ್ಬಂಧಿಸಿ, ಸಂಪೂರ್ಣ ಲಾಕ್​ಡೌನ್​ ಮಾಡುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ 6 ಜಿಲ್ಲೆಗಳಲ್ಲಿ ಕೊವಿಡ್ ಪಾಸಿಟಿವಿ ದರ ಹೆಚ್ಚಿದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣವಿದ್ದು, ಕಳೆದ 7 ದಿನದಿಂದ ಕೊವಿಡ್ ಪಾಸಿಟಿವಿಟಿ ದರ ಹೆಚ್ಚಳವಾಗಿರುವುದು ಆತಂಕಕಾರಿ ಬೆಳವಣಿಗೆ. ಹೀಗಾಗಿ ಕಠಿಣ ಕ್ರಮ ಜಾರಿ ಮಾಡಲೇಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.