ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆ: ಕೆ. ರಘುಪತಿ ಭಟ್

ಉಡುಪಿ: ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೆ ಉತ್ತೇಜಿಸುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ 24 ರಂದು ಕೇಂದ್ರ ಯುವಜನ ಕ್ರೀಡೆ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.

ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟನೆ ಕುರಿತು ನಡೆದ, ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಕ್ರೀಡಾ ವಿಜ್ಞಾನ ಕೇಂದ್ರದಿಂದ ಕ್ರೀಡಾಪಟುಗಳು ತಮ್ಮ ದೈನಂದಿನ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ತರಬೇತಿ, ಸೂಕ್ಷ್ಮ ಸಲಹೆ ಸೇರಿದಂತೆ ಮತ್ತಿತರ ಕ್ರೀಡಾ ಕೌಶಲ್ಯಗಳನ್ನು ನೀಡುವುದರ ಜೊತೆಗೆ ಕ್ರೀಡಾ ಪ್ರದರ್ಶನದಲ್ಲಿ ಆಗುವ ಆಕಸ್ಮಿಕ ಅಪಘಾತಗಳ ಚಿಕಿತ್ಸೆಗೆ ಈ ಕೇಂದ್ರ ನೆರವಾಗಲಿದೆ. ಕ್ರೀಡಾ ಕೇಂದ್ರದ ಉದ್ಘಾಟನೆಯನ್ನು ಕೇಂದ್ರ ಯುವಜನ ಕ್ರೀಡೆ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರು ಅಂದು ಸಂಜೆ 6 ಕ್ಕೆ ಉದ್ಘಾಟಿಸಲಿದ್ದು, ರಾಜ್ಯ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲೆಯ ಕ್ರೀಡಾ ಪಟುಗಳಿಗೆ ಮತ್ತಷ್ಟು ಸ್ಫೂರ್ತಿ ತುಂಬಲು ಅನುಕೂಲವಾಗುವಂತೆ ನಗರದಲ್ಲಿ ಕ್ರೀಡಾವಿಜ್ಞಾನ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಬೇಡಿಕೆಯ ಪ್ರಸ್ತಾವನೆಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು ಎಂದ ಅವರು, ಕೇಂದ್ರ ಕ್ರೀಡಾ ಸಚಿವರು ಕ್ರೀಡಾಪಟುಗಳೊಂದಿಗೆ ಸಂವಾದ ಸಹ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ರೀಡಾಪಟುಗಳು, ಕ್ರೀಡಾ ತಂಡಗಳು ಮತ್ತು ಕ್ರೀಡಾ ಸಂಘಟನೆಗಳ ಸದಸ್ಯರು ಹಾಗೂ ವಿವಿಧ ಕ್ರೀಡೆಯಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳು ಸೇರಿದಂತೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ಕ್ರೀಡಾ ಚಟುವಟಿಕೆಗಳು ನಿತ್ಯೋತ್ಸವಗಳ ರೀತಿಯಲ್ಲಿ ನಿತ್ಯವೂ ನಡೆಯುತ್ತಿದೆ. ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಭಾಗವಹಿಸಿ ಜಯಶೀಲರಾಗುವುದರೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಕ್ರೀಡಾ ವಿಜ್ಞಾನ ಕೇಂದ್ರ ಪ್ರಾರಂಭದಿಂದ ಈ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜನವರಿ 20 ರಿಂದ 22 ರವರೆಗೆ ಮಲ್ಪೆ ಬೀಚ್‌ನಲ್ಲಿ ನಡೆಸುವ ಬಗ್ಗೆ ಚರ್ಚಿಸಲಾಯಿತು. ಉತ್ಸವದ ಅಂಗವಾಗಿ ಸಮುದ್ರದಲ್ಲಿ ಈಜುವ ಸ್ಪರ್ಧೆ, ಬೀಚ್ ಕಬಡ್ಡಿ, ವಾಲಿಬಾಲ್, ಮರಳು ಶಿಲ್ಪ ರಚನೆ, ಗಾಳಿಪಟ ಉತ್ಸವ, ವೈನ್ ಮೇಳ, ಶ್ವಾನ ಪ್ರದರ್ಶನ, ಹಗ್ಗ ಜಗ್ಗಾಟ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆ, ಹೆಲಿಕ್ಯಾಪ್ಟರ್ ಪ್ರವಾಸ, ಛಾಯಾಚಿತ್ರ ಸ್ಪರ್ಧೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿದ್ದು, ಪ್ರತಿದಿನ ಸಂಜೆ 7 ರಿಂದ 10 ರವರೆಗೆ ಜಿಲ್ಲೆಯ ಪ್ರಸಿದ್ಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.