ಉಡುಪಿ: ಇಂದಿನ ಯಾಂತ್ರಿಕ ಬದುಕಿನಲ್ಲಿ ದೇಹಕ್ಕೆ ಸೂಕ್ತ ವ್ಯಾಯಾಮ ದೊರೆಯದೆ ಜನರು ಅನೇಕ ರೋಗಗಳಿಂದ ಬಳಲುತ್ತಿದ್ದು ದೈನಂದಿನ ಬದುಕಿನಲ್ಲಿ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ. ಯೋಗ ಭಾರತದ ಪ್ರಾಚೀನ ಪರಂಪರೆಯು ವಿಶ್ವಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.
ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರ್ಯಾಯ ಕೃಷ್ಣಾಪುರ ಮಠ ಉಡುಪಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದಿಂದಾಗಿ ಇಂದು ಯೋಗವು ಇಡೀ ವಿಶ್ವಕ್ಕೆ ಹರಡಿದ್ದು, ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ದಿನದ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವಂತರಾಗಿ ಆಸ್ಪತ್ರೆಗಳಿಂದ ದೂರ ಉಳಿಯಲು ಸಾಧ್ಯವಾಗಲಿದೆ. ಯೋಗಾಭ್ಯಾಸ ನಿತ್ಯ ಜೀವನದ ಭಾಗವಾಗಬೇಕು. ಇಂದು ವಿಶ್ವದೆಲ್ಲೆಡೆ ಯೋಗಾಭ್ಯಾಸವನ್ನು ಮಾಡುತ್ತಿದ್ದಾರೆ. ಮುಂದುವರೆದ ದೇಶವಾದ ಅಮೇರಿಕದಲ್ಲಿ ಸಹ ಯೋಗ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಯೋಗವು ವಿಶ್ವಕ್ಕೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆ. ಯೋಗದ ಮೂಲಕ ಪ್ರತಿಯೊಬ್ಬರೂ ತಮ್ಮನ್ನು ತಾವು ಅರಿತುಕೊಳ್ಳಲು ಹಾಗೂ ಉತ್ತಮ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಲು ಸಾಧ್ಯ. ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಯೋಗ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಯೋಗ ಶಿಕ್ಷಕ ಬಿರಾದರ್ ಯೋಗ ಪ್ರಾತ್ಯಕ್ಷಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಜಿಲ್ಲಾ ಸಂಚಾಲಕ ಚಂದ್ರಶೇಖರ್ ಹಾಗೂ ಮತ್ತಿತರರು ಭಾಗವಹಿಸಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಸ್ವಾಗತಿಸಿದರು.