ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ
ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಪರ್ಯಾಯ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಉಡುಪಿ, ಜಿಲ್ಲೆಯ ಯೋಗಸಂಸ್ಥೆಗಳು, ಸಂಘ-ಸಂಸ್ಥೆಗಳು ಹಾಗೂ ಯೋಗಾಸಕ್ತರು ಇವರ ಸಹಯೋಗದಲ್ಲಿ ಜೂನ್ 21 ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಗ್ಗೆ 6.45 ಕ್ಕೆ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಗುವುದು.
ಯೋಗವನ್ನು ದಿನನಿತ್ಯದ ಚಟುವಟಿಕೆಯಾಗಿಸಿಕೊಂಡಲ್ಲಿ ಜನರ ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸಿಕೊಳ್ಳಬಹುದಾಗಿದ್ದು, ಈ ಹಿನ್ನೆಲೆ ‘ಮಾನವತೆಗಾಗಿ ಯೋಗ’ ಘೋಷವಾಕ್ಯದೊಂದಿಗೆ ಜಿಲ್ಲೆಯ ಶ್ರೀಕೃಷ್ಣ ಮಠ ಹಾಗೂ ಕಾರ್ಕಳದ ಗೊಮ್ಮಟ ಬೆಟ್ಟ ಸ್ಥಳಗಳಲ್ಲಿ ಪ್ರಸಕ್ತ ಸಾಲಿನ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಯೋಗಾಸನಗಳ ಪ್ರಾತ್ಯಕ್ಷಿಕೆ ಪ್ರದರ್ಶನ, ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮುಂತಾದ ಯೋಗದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿ ತಿಳಿಸಿದ್ದಾರೆ.