ಎಐಸಿಸಿ ಕಾರ್ಯದರ್ಶಿಯಾಗಿ ಐವನ್ ಡಿಸೋಜ ನೇಮಕ

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರು ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷ) ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ.

ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ಬೆನ್ನಲ್ಲೆ ಐವನ್ ಡಿಸೋಜ ಅವರಿಗೆ ಕೇರಳ ರಾಜ್ಯದ ಉಸ್ತುವಾರಿಯನ್ನು ವಹಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶಿಸಿದ್ದಾರೆ. ಐವನ್ ಅವರು ಈ ಹಿಂದೆ ಕೇರಳ ರಾಜ್ಯದ ಇಡ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳ ಚುನಾವಣಾ ವೀಕ್ಷಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಐವನ್ ಡಿಸೋಜ ಅವರು 1994 ಮತ್ತು 1999ರಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದಿಂದ ಹಾಗೂ 2008ರಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಲ್ಲದೆ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿಯಾಗಿ ಕಂದಾಯ ಇಲಾಖೆಯ ಜವಾಬ್ದಾರಿ ವಹಿಸಿದ್ದರು. ವಿಧಾನ ಪರಿಷತಿನಲ್ಲಿ ಶೇ.100 ಹಾಜರಾತಿ ಪಡೆದು ಸದನವೀರ ಪ್ರಶಸ್ತಿಗೆ ಪಾತ್ರರಾಗಿದ್ದರು.