ನವದೆಹಲಿ: ಜಮ್ಮು ಮತ್ತು ಕಾಶ್ಮೀರ (ಜಮ್ಮು ಕಾಶ್ಮೀರ) ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಘೋಷಣೆ ಮಾಡಿದ್ದು, ಸೆಕ್ಷನ್ 370 ರ ಎಲ್ಲಾ ವಿಭಾಗಗಳು ರಾಜ್ಯದಲ್ಲಿ ಅನ್ವಯಿಸುವುದಿಲ್ಲ ಎಂದಿದ್ದಾರೆ.
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸುವ ಬಗ್ಗೆ ಪ್ರಸ್ತಾಪ ಮಂಡಿಸಿದರು.
ಗೃಹ ಸಚಿವ ಅಮಿತ್ ಶಾ ಪ್ರಸ್ತಾಪ ಮಂಡಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಸೇರಿದಂತೆ ಪ್ರತಿಪಕ್ಷದ ಹಲವು ನಾಯಕರು ತಿದ್ದುಪಡಿ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಪ್ರತಿಪಕ್ಷಗಳ ಗದ್ದಲ, ಕೋಲಾಹಲದ ನಡುವೆಯೇ ಗೃಹ ಸಚಿವ ಅಮಿತ್ ಶಾ ಕಾಶ್ಮೀರದ 370, 35(A) ವಿಧಿ ರದ್ದು ಮಾಡಿ ಮಹತ್ವದ ಘೋಷಣೆ ಮಾಡಿದೆ ಎಂದು ತಿಳಿಸಿದರು.
ಬೆಳಿಗ್ಗೆ ಪ್ರಧಾನಿ ನಿವಾಸದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ ಭಾಗವಹಿಸಿದ್ದರು. ದೇಶದ ಎಲ್ಲ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ ನೀಡಿದೆ.