ಉಡುಪಿ: ಜಿಲ್ಲಾ ಬಿಜೆಪಿ ಜನಸಂಕಲ್ಪ ಸಮಾವೇಶವು ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4ಕ್ಕೆ ಕುಂದಾಪುರ ತಾಲೂಕಿನ ತ್ರಾಸಿ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಗುರುವಾರದಂದು ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ, ತ್ರಾಸಿಯಲ್ಲಿ ನಡೆಯುವ ಜನಸಂಕಲ್ಪ ಸಮಾವೇಶದ ಪೂರ್ವಭಾವಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.1,318 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಮಹಿಳಾಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ದಾವೂದ್, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ ಬೈಕಾಡಿ, ಮಾಧ್ಯಮ ವಿಭಾಗದ ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.