ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಅದರಂತೆ ಇಂದು ಅವರು ದಂಡ ಪಾವತಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಜೂನ್ 26 ಮತ್ತು 27ರಂದು ಎರಡು ಟ್ವೀಟ್ ಮಾಡಿದ್ದರು. ಇದು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ಆದರೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು.