ಕರಾವಳಿಯಾದ್ಯಂತ ಆಗಸ್ಟ್ 13ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ: ರೆಡ್ ಅಲರ್ಟ್ ಮುಂದುವರಿಕೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆ.13ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ‌ ನೀಡಿದೆ.
ಮುಂಗಾರು ಬಿರುಸುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗರಿಷ್ಠ 4 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಎಲ್ಲ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.