ಕಾರ್ಕಳ: ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಾಳ ನಿವಾಸಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಕಾರ್ಕಳ: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪರಿಬೆಟ್ಟು ನಿವಾಸಿ ಮಿತ್ರಾಜ್ (35) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ.

ಕುಟುಂಬದೊಂದಿಗೆ ವಾಸವಾಗಿದ್ದ ಅವರು, ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಇದರಿಂದಲೇ ಮಾನಸಿಕ ರೋಗಕ್ಕೆ ಒಳಗಾಗಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಪತಿಯ ವರ್ತನೆಗೆ ಬೇಸತ್ತು ಪತ್ನಿ ನಾಗರತ್ನ ಆರು ತಿಂಗಳ ಹಿಂದೆಯೇ ತವರು ಮನೆಗೆ ಹೋಗಿದ್ದರು. ಇದೇ ಖಿನ್ನತೆಯಲ್ಲಿ 15 ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದ ಮಿತ್ರಾಜ್, ಫೆ. 27ರಂದು ಮಧ್ಯಾಹ್ನ ಮೈಗೆ ಸೀಮೆಎಣ್ಣೆ ಹಾಕಿಕೊಂಡು ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.