‘ಕಾವೇರಿ’ದ ನೀರು ಬಿಡುಗಡೆ ಕಾದಾಟ: ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕಕ್ಕೆ ಮಂಗಳವಾರ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 13 ರಂದು “ವಿಶೇಷ ತುರ್ತು ಸಭೆ”ಗೆ ಕರೆ ನೀಡಿದ್ದಾರೆ.

ತುರ್ತು ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ಸಚಿವರು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ.

ವಿಶೇಷ ತುರ್ತು ಸಭೆಯನ್ನು ಇಂದು ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಲಾಗುವುದು.

ಇಂದು ಮುಂಜಾನೆ ಸಿದ್ದರಾಮಯ್ಯ ಅವರು ಸಿಡಬ್ಲ್ಯುಆರ್‌ಸಿ ಶಿಫಾರಸಿ ಬಗ್ಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ತುರ್ತು ಸಭೆ ನಡೆಸಿದರು. ಶಿವಕುಮಾರ್, ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಲವು ಹಿರಿಯ ಸಚಿವರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನದಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಮಳೆಯಾಗದ ಕಾರಣ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾಳೆಯೊಳಗೆ ಈ ವಿಷಯವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಮುಂದೆ ಬರಲಿದೆ ಮತ್ತು ಕರ್ನಾಟಕವು ಅದರ ಮುಂದೆ ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ಅವರು ಹೇಳಿದ್ದಾರೆ.