ಬೆಂಗಳೂರು: 2022ರಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಸಿಎಂ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ.
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಜರಾಗುವಂತೆ ಸೂಚಿಸಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ 2022 ರ ಏಪ್ರಿಲ್ನಲ್ಲಿ ಈಗಿನ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
2022ರಲ್ಲಿ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದತ್ತ ಅಕ್ರಮವಾಗಿ ಪಾದಯಾತ್ರೆ ನಡೆಸಿದ್ದರು. 2022ರಲ್ಲಿ ರಸ್ತೆ ತಡೆ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶವನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದರು. ಆದರೆ, ನ್ಯಾಯಾಲಯ ಮನವಿಯನ್ನು ತಿರಸ್ಕರಿಸಿದೆ.
“ಜನಪ್ರತಿನಿಧಿಗಳು ನಿಯಮ ಪಾಲಿಸದಿದ್ದರೆ ಸಾರ್ವಜನಿಕರು ಪಾಲಿಸುತ್ತಾರಾ? ರಸ್ತೆ ತಡೆದು ಪ್ರತಿಭಟನೆ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅವರು ಜನಪ್ರತಿನಿಧಿಗಳು ಎಂಬ ಕಾರಣಕ್ಕೆ ರಸ್ತೆ ತಡೆಯನ್ನು ಒಪ್ಪಲು ಸಾಧ್ಯವಿಲ್ಲ. ಜನಪ್ರತಿನಿಧಿಗಳು ಕಾನೂನು ಪಾಲಿಸಬೇಕು. ಕಾನೂನಿನ ಮುಂದೆ ಪ್ರಧಾನಿ ಮತ್ತು ಪೋಸ್ಟ್ಮ್ಯಾನ್ ಇಬ್ಬರೂ ಸಮಾನರು” ಎಂದು ಕೋರ್ಟ್ ಹೇಳಿದೆ.