ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು (Board Exam) ರದ್ದು ಮಾಡಿ ಹೈಕೋರ್ಟ್ (High Court) ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (ಬೋರ್ಡ್ ಪರೀಕ್ಷೆ) ನಡೆಸಲು ಸರ್ಕಾರ ಆದೇಶಿಸಿತ್ತು. ಹಾಗೇ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.
ರಾಜ್ಯ ಸರ್ಕಾರದ ಆದೇಶ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ (ಸಿಸಿಇ) ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ನ್ಯಾಯಾಲಯದಲ್ಲಿ ವಾದಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ರೂಪ್ಸಾ ಪರವಾಗಿ ತೀರ್ಪು ನೀಡಿದೆ. 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಮುಂದಿನ ವಾರದಿಂದಲೇ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಹೈಕೋರ್ಟ್ನ ಈ ಆದೇಶದಿಂದ ಶಿಕ್ಷಣ ಇಲಾಖೆ ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ.
ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.