5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು (Board Exam) ರದ್ದು ಮಾಡಿ ಹೈಕೋರ್ಟ್​ (High Court) ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (ಬೋರ್ಡ್​​ ಪರೀಕ್ಷೆ) ನಡೆಸಲು ಸರ್ಕಾರ ಆದೇಶಿಸಿತ್ತು. ಹಾಗೇ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.

ರಾಜ್ಯ ಸರ್ಕಾರದ ಆದೇಶ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ (ಸಿಸಿಇ) ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ನ್ಯಾಯಾಲಯದಲ್ಲಿ ವಾದಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ರೂಪ್ಸಾ ಪರವಾಗಿ ತೀರ್ಪು ನೀಡಿದೆ. 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಮುಂದಿನ ವಾರದಿಂದಲೇ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಹೈಕೋರ್ಟ್​ನ ಈ ಆದೇಶದಿಂದ ಶಿಕ್ಷಣ ಇಲಾಖೆ ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ.

ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.