ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ.
ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಸಂಚಿನಲ್ಲಿ ಮುಜಾಮಿಲ್ ಶರೀಫ್ ಭಾಗಿಯಾಗಿದ್ದ. ಬಾಂಬ್ ಇರಿಸಿದ್ದಾನೆ ಎನ್ನಲಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಸಹಕಾರ ನೀಡಿದ್ದ ಎಂದು ಎನ್‌ಐಎ ಮೂಲಗಳು ಹೇಳಿವೆ.
18 ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಮುಜಾಮಿಲ್ ಶರೀಫ್, ಪ್ರಮುಖ ಶಂಕಿತರಿಗೆ ಸಹಾಯ ಮಾಡಿರುವುದು ಇದುವರೆಗಿನ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ, ಈತನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.