ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಆರೋಪಿಗಳಿಗೆ ಟ್ರಾನ್ಸಿಟ್ ರಿಮಾಂಡ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ (Rameshwaram Cafe Blast) ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.

ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಎನ್‌ಐಎ ಮನವಿ ಮೇರೆಗೆ ಸಿಟಿ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ಗೆ ಅನುಮತಿ ನೀಡಿದ್ದಾರೆ.

ಆರೋಪಿಗಳನ್ನು ಕೋಲ್ಕತ್ತಾದಿಂದ 190 ಕಿಮೀ ದೂರದಲ್ಲಿರುವ ಪುರ್ಬಾ ಮೇದಿನಿಪುರ್ ಜಿಲ್ಲೆಯ ಕಡಲತೀರದ ಪ್ರವಾಸಿ ಪಟ್ಟಣ ದಿಘಾದಲ್ಲಿರುವ ಹೋಟೆಲ್‌ನಿಂದ ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ತಾಹಾ ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಆಗಿದ್ದು, ಶಾಜಿಬ್ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.