ಕೊಲ್ಲೂರು: ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳವು: 24 ಗಂಟೆಯೊಳಗೆ ಮೂವರು ಅಂತರ್ ಜಿಲ್ಲಾ ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ಕಳವು ಮಾಡಿದ ಆರೋಪದಡಿ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24 ಗಂಟೆಯೊಳಗೆ ಬಂಧಿಸಿದ್ದಾರೆ.

ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಗಳಾದ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಅವರು ಜುಲೈ 5ರಂದು ದೇವಸ್ಥಾನದಲ್ಲಿ ದೇವರ ದರ್ಶನ ಮುಗಿಸಿ ಹೊರಾಂಗಣಕ್ಕೆ ಬಂದಾಗ, ರಾತ್ರಿ ಸುಮಾರು 8.20ಕ್ಕೆ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದ ವೇಳೆ ಅದರ ಜಿಪ್ ತೆರೆದಿದ್ದು, ಒಳಗಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಗೊತ್ತಾಯಿತು.

ದೇವಸ್ಥಾನದ ಸುತ್ತಮುತ್ತ ಹುಡುಕಿದರೂ ಪರ್ಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2)ರಡಿ ಪ್ರಕರಣ ದಾಖಲಿಸಲಾಗಿತ್ತು.

ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಲ್ಲೂರು ಠಾಣೆಯ ಪಿಎಸ್‌ಐ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಬಂಧಿತ ದುರ್ಗಮ್ಮ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕಳವು ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಶಾರದ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಸೇರಿ ಒಟ್ಟು ಮೂರು ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.