ಕೊಲ್ಲೂರು: ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ- ಇಬ್ಬರ ಬಂಧನ: ಜಾತಿ ನಿಂದನೆ ಪ್ರಕರಣದಲ್ಲೂ ಆರೋಪಿ ಬಂಧನ

ಉಡುಪಿ: ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಕ್ಕೆ ಕುಂದುಂಟಾಗುವಂತೆ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಬೆಳ್ಳಾಲ ಗ್ರಾಮದ ನಿವಾಸಿ ಮಹಿಳೆಯೊಬ್ಬರು ಆಗಸ್ಟ್ 6ರಂದು ನೀಡಿದ ದೂರಿನ ಆಧಾರದ ಮೇಲೆ ಸನತ್‌ ಕುಂದಾಪುರ ಎಂಬಾತನ ವಿರುದ್ಧ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಈ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯ ಕುಟುಂಬದವರು ಸನತ್‌ ನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ಸನತ್‌ ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎರಡೂ ಪ್ರಕರಣಗಳ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳನ್ನೂ ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.