ಕೋಟ: ಇಲ್ಲಿನ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತನನ್ನು ಪಾಂಡೇಶ್ವರ ಯಡಬೆಟ್ಟು ನಿವಾಸಿ ಸುನಿಲ್ ಮೋಗವೀರ (28) ಎಂದು ಗುರುತಿಸಲಾಗಿದೆ. ಇಂದು ದೇವರ ದರ್ಶನ ಪಡೆದ ಬಳಿಕ ದೇಗುಲದ ಆವರಣದಲ್ಲಿದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಕೂಲಿ ಕೆಲಸ ಮಾಡುತ್ತಿದ್ದ ಈತನಿಗೆ, ಇತ್ತೀಚಿನ ದಿನಗಳಲ್ಲಿ ಸರಿಯಾದ ಕೆಲಸ ಇರಲಿಲ್ಲ. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದನು. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸುನಿಲ್ ಕೆರೆಗೆ ಹಾರಿದ ಕೂಡಲೇ ಸ್ಥಳೀಯರು ಆತನ ರಕ್ಷಣೆಗೆ ಧಾವಿಸಿದ್ದರು. ಆದರೆ ಅಷ್ಟೊತ್ತಿಗೆ ಸುನಿಲ್ ನ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.