ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್ ಎರ್ಮಾಯಿಲ್ ಸಮೀಪ ತಲುಪಿದಾಗ ಬಸ್‌ನಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್‌ನ್ನು ನಿಲ್ಲಿಸಿ ಪ್ರಯಾಣಿಕರಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಯಾವುದೇ ಆತಂಕಕ್ಕೆ ಒಳಗಾಗದಂತೆ ಪ್ರಯಾಣಿಕರನ್ನು ಕೂಡಲೇ ಬಸ್ಸಿನಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಯಾಣಿಕರು ಬಸ್ಸಿನಿಂದ ಸುರಕ್ಷಿತವಾಗಿ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಬಸ್‌ನ್ನು ಆವರಿಸಿದೆ. ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.
ಚಾಲಕ ಸಮಯಪ್ರಜ್ಞೆ ಮೆರೆದು ಹೊಗೆ ಕಾಣಿಸಿಕೊಂಡ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಘಟನೆಯಿಂದ ಕೆಲಕಾಲ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಸ್‌ಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.















