ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೇ 23ರಂದು ಬೆಳಿಗ್ಗೆ 11.47ರಿಂದ ರಾತ್ರಿ 9.10 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಒಡೆದು ಒಳನುಗ್ಗಿ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಮಾಡಿದ್ದರು. ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಂತ್ರಾಡಿ ಬಾಯರಬೆಟ್ಟು ನಿವಾಸಿ ವಿಜಯ ಶೆಟ್ಟಿ (32) ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ ಸುಮಾರು ₹9 ಲಕ್ಷ ಮೌಲ್ಯದ 66.22 ಗ್ರಾಂ ಚಿನ್ನ ಹಾಗೂ 175.4 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಇದೇ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಂದಾರು ಗ್ರಾಮದ ಅರ್ಜುನ ಪೂಜಾರಿ (29) ಎಂಬಾತನನ್ನು ಬಂಧಿಸಿ, ಆತನಿಂದ ಸುಮಾರು ₹2 ಲಕ್ಷ ಮೌಲ್ಯದ 18.2 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಅಶ್ರಫ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.