ಕುಂದಾಪುರ: ಹೆದ್ದಾರಿಯಲ್ಲಿ ಮಳೆ ನೀರುನಿಂತು ವಾಹನ ಸಂಚಾರಕ್ಕೆ ತೊಂದರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸ್ಥಳೀಯರ ಆಕ್ರೋಶ

ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಬಳಿ ಇಂದು ಸ್ಥಳೀಯರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರನ್ನು ತಡೆದು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಆಗುತ್ತಿರುವ ಸಮಸ್ಯೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ಅಸಮರ್ಪಕ ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ಇದರಿಂದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಕಳೆದ ಹತ್ತು ವರ್ಷಗಳಿಗಿಂತಲೂ ಹೆಚ್ಚು ಸಮಯದಿಂದ ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಪ್ರತಿಬಾರಿ ಮಳೆಗಾಲದಲ್ಲೂ ಸಾರ್ವಜನಿಕರು ಇದೇ ಸಮಸ್ಯೆಯನ್ನು ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ನಿತ್ಯ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದಕ್ಕೆ ಯಾರು ಜವಾಬ್ದಾರರು ಎಂದು ಸಚಿವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.