ಉಡುಪಿಯಲ್ಲಿ ಮತ್ತೊಬ್ಬ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು: ಕುಂದಾಪುರ ತಾಲ್ಲೂಕಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ದೃಢ

ಉಡುಪಿ: ಕುಂದಾಪುರ ತಾಲ್ಲೂಕಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಸೋಮವಾರ ವಿಜ್ಞಾನ ವಿಷಯದ ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿನಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿತ್ತು. ಈ ನಿಟ್ಟಿನಲ್ಲಿ ಆಕೆಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ.
ವಿದ್ಯಾರ್ಥಿನಿಗೆ ಸೋಂಕು ಹೇಗೆ ತಗುಲಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಆಕೆಯ ಕುಟುಂಬದ ಸದಸ್ಯರಿಗೆ ಸೋಂಕು ಇಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
ಸೋಂಕಿತ ವಿದ್ಯಾರ್ಥಿನಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೂರಕ ಪರೀಕ್ಷೆಯಲ್ಲಿ ಉಳಿದ ವಿಷಯಗಳ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಹಾಗೆಯೇ ವಿದ್ಯಾರ್ಥಿ ಪರೀಕ್ಷೆ ಬರೆದ ಕೊಠಡಿಯನ್ನು ಸಂಪೂರ್ಣ ಸ್ಯಾನಿಟೈಸರ್ ಮಾಡಲಿದ್ದು, ಆ ಕೊಠಡಿಯಲ್ಲಿ ಪರೀಕ್ಷೆ ನಡೆಸದಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಎರಡು ದಿನಗಳ ಹಿಂದೆ ಕಾಪು ತಾಲ್ಲೂಕಿನಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಗೆ ಸೋಂಕು ತಗುಲಿದ್ದು, ಇದು ಜಿಲ್ಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಎರಡನೇ ಪ್ರಕರಣವಾಗಿದೆ.