ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಹ್ಯಾಪಿ ಇಂಜಿನಿಯರಿಂಗ್’ ಕುರಿತು ಉಪನ್ಯಾಸ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಹ್ಯಾಪಿ ಇಂಜಿನಿಯರಿಂಗ್” ವಿಷಯದ ಕುರಿತು ಉಪನ್ಯಾಸವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.

ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ತಜ್ಞ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಎದುರಿಸುತ್ತಿರುವ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಶಸ್ಸನ್ನು ಕಾಣಬೇಕಾದರೆ ಅವರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ ಇದಕ್ಕಾಗಿ ಅವರು ದಿನನಿತ್ಯದ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಒತ್ತಡವನ್ನು ಕಡಿಮೆ ಮಾಡಲು ಬೇಕಾದ ತಂತ್ರಗಳಾದ ಸಾವಧಾನತೆಯ ತಂತ್ರಗಳು, ಸಮಯ ನಿರ್ವಹಣೆಯ ತಂತ್ರಗಳು ಮತ್ತು ಸಾಮಾಜಿಕ ಬೆಂಬಲವನ್ನು ಪಡೆಯುವ ಪ್ರಾಮುಖ್ಯತೆಯನ್ನು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ ಅತಿಥಿಗಳನ್ನು ಸ್ವಾಗತಿಸಿ, ಇಂತಹ ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಯ ಜೀವನದಲ್ಲಿ ಒಳ್ಳೆಯ ಪರಿಣಾಮವನ್ನು ಬೀರುತ್ತದೆ ಎಂದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರವೀಂದ್ರ ಹೆಚ್ ಜೆ ಕಾರ್ಯಕ್ರಮ ಸಂಯೋಜಿಸಿದರು.